ಬೆಳ್ತಂಗಡಿ, ಜೂನ್ 9: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿರುವ ಪೊಲೀಸರು ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ 2026ರ ಏಪ್ರಿಲ್ 5ರಂದು ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅಪರಾಧ ಸಂಖ್ಯೆ 38/2026 ಪ್ರಕರಣದ ತನಿಖೆ ವೇಳೆ ಮೇ 15ರಂದು ಬಂಟ್ವಾಳದ ಕೊಳ್ನಾಡು ನಿವಾಸಿಯಾಗಿದ್ದು ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿದ್ದ ಹಮೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ವೇಳೆ ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಸ್ವಾಧೀನಪಡಿಸಿಕೊಳ್ಳಲಾಗಿತ್ತು.ಹಮೀದ್ನ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದಲ್ಲಿ ಜೂನ್ 7ರಂದು ಮತ್ತೋರ್ವ ಆರೋಪಿ ಜಾಬೀರ್ ಅಲಿಯಾಸ್ ಜಾಬೀ (38) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಈ ವೇಳೆ ಪುಂಜಾಲಕಟ್ಟೆ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು, ಜೊತೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹23.67 ಲಕ್ಷ ಎಂದು ಅಂದಾಜಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಆರೋಪಿಗಳು ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳು ಸೇರಿದಂತೆ ಒಟ್ಟು ಐದು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.ಪ್ರಕರಣದ ಪತ್ತೆ ಕಾರ್ಯವನ್ನು ಬೆಳ್ತಂಗಡಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್., ಉಪ್ಪಿನಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ನಾಗರಾಜ್ ಹೆಚ್.ಇ., ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ರಾಜೇಶ್ ಕೆ.ವಿ. ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿ ನಡೆಸಿದೆ. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ಸಹ ತನಿಖೆಗೆ ನೆರವಾಗಿದ್ದಾರೆ.








