




ಮಂಗಳೂರು, ಜೂ. 9: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್‌ಶೆಡ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕುಲಶೇಖರದ ಸಿಲ್ವರ್ ಗೇಟ್ ನಿವಾಸಿ ಜನನ್ ಜಗನ್ನಾಥ್ (29) ಹಾಗೂ ಬೋಳಾರದ ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.ಜೂನ್ 8ರಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇದೇ ವೇಳೆ, ಮಂಗಳೂರು ದಕ್ಷಿಣ ಠಾಣೆಯಲ್ಲಿ ದಾಖಲಾಗಿರುವ ಎನ್‌ಡಿಪಿಎಸ್ ಕಾಯ್ದೆಯ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಕಾರ್‌ಸ್ಟ್ರೀಟ್ ಸಮೀಪದ ನಿವಾಸಿ ಸುಶಾನ್ ಪೂಜಾರಿ (27) ಎಂಬಾತನನ್ನು ಪೊಲೀಸರು ಜೂನ್ 9ರಂದು ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ತನಿಖೆ ಮುಂದುವರಿಸಿದ ಪೊಲೀಸರು ಇದೀಗ ಸುಶಾನ್ ಪೂಜಾರಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯುವ ಮೂಲಕ ವಿಚಾರಣೆ ನಡೆಸಲಾಗುತ್ತಿದೆ.








