
ಮಂಗಳೂರು, ಜೂನ್ 10: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಯಾನೆ ಇಬ್ರಾಹಿಂ ಹಾಗೂ ಜಿತೇಶ್ ಎಂಬ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಗುತ್ತಿಗೆದಾರರೊಂದಿಗೆ ಕೆಲಸ ಮಾಡುತ್ತಿದ್ದ ಜಿತೇಶ್, ಅವರ ಖಾಸಗಿ ಕ್ಷಣಗಳ ವಿಡಿಯೊ ಮತ್ತು ಫೋಟೋಗಳನ್ನು ಗುಪ್ತವಾಗಿ ಚಿತ್ರೀಕರಿಸಿ 2024ರಿಂದ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಬಳಿಕ ಗುತ್ತಿಗೆದಾರ ಸಹಾಯಕ್ಕಾಗಿ ಕೋರಿದ ವ್ಯಕ್ತಿ ನಿಝಾಮ್ ಸಹಾಯ ಮಾಡುವ ಬದಲು ಜಿತೇಶ್ ಜೊತೆ ಸೇರಿಕೊಂಡು ಹಣಕ್ಕಾಗಿ ಬೆದರಿಕೆ ಹಾಕಲು ಆರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಜಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ, ಆತನ ಡೆತ್‌ನೋಟ್‌ನಲ್ಲಿ ನಿಮ್ಮ ಹೆಸರು ಇದೆ, ನ್ಯಾಯಾಲಯದ ಪ್ರಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಬೆದರಿಸಿ ಗುತ್ತಿಗೆದಾರರಿಂದ ಹಣ ವಸೂಲಿ ಮಾಡಲಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಇಬ್ಬರೂ ಸೇರಿ ಸುಮಾರು ₹2.57 ಕೋಟಿ ಹಣ ವಸೂಲಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಜಿತೇಶ್ ನಗರದಲ್ಲಿ ಇರುವುದನ್ನು ಕಂಡ ಗುತ್ತಿಗೆದಾರರಿಗೆ ಅನುಮಾನ ಮೂಡಿದ್ದು, ತಾವು ಮೋಸ ಹೋಗಿರುವುದನ್ನು ಅರಿತು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹುದ್ದೆಯಿಂದ ಉಚ್ಚಾಟನೆ
ಪ್ರಕರಣ ಬೆಳಕಿಗೆ ಬಂದ ತಕ್ಷಣ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ನಿಝಾಮ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಂದ ಉಚ್ಚಾಟಿಸಲಾಗಿದೆ. ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪ ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಗ್ರ ತನಿಖೆಗೆ ಬಿಜೆಪಿ ಯುವ ಮೋರ್ಚಾ ಒತ್ತಾಯ:
ಪ್ರಕರಣದ ಹಿಂದೆ ಇನ್ನೂ ಪ್ರಭಾವಿ ರಾಜಕೀಯ ವ್ಯಕ್ತಿಗಳ ಪಾತ್ರವಿದೆಯೇ ಎಂಬುದನ್ನು ಪತ್ತೆಹಚ್ಚಲು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಗ್ರಹಿಸಿದೆ.ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕರಣದಲ್ಲಿ ಬೇರೆ ರಾಜಕೀಯ ಮುಖಂಡರ ಹಸ್ತಕ್ಷೇಪ ಅಥವಾ ಹಣಕಾಸಿನ ಲಾಭದ ಹಂಚಿಕೆ ನಡೆದಿದೆಯೇ ಎಂಬುದನ್ನು ಪೊಲೀಸರು ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.








