
ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ವಂಚಿಸಿರುವ ಆರೋಪದಲ್ಲಿ ಕೃಷ್ಣಜೆ.ರಾವ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿವಾದವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ಹೈಕೋರ್ಟ್ ಇದೀಗ ರಾಜಿ ಸಂಧಾನದ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಿದೆ.ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆದಾಗ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಕುರಿತು ಕೋರ್ಟ್ ಮುಂದೆ ಪ್ರಸ್ತಾಪಿಸಿದ್ದರು.
ಇದನ್ನು ಪುರಸ್ಕರಿಸಿದ್ದ ನ್ಯಾಯಪೀಠ, ಜೂ.19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಕಡ್ಡಾಯವಾಗಿ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿ, ವಿಚಾರಣೆಯನ್ನು ಜೂ.30ಕ್ಕೆ ಮುಂದೂಡಿತ್ತು. ಇದೀಗ, ರಾಜಿಸಂಧಾನದ ಮಧ್ಯಸ್ಥಿಕೆದಾರರಾಗಿ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಲಾಗಿದೆ.








