
ಉಪ್ಪಿನಂಗಡಿ: 2023ರ ಮಾರ್ಚ್ 20ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 34/2023ರಡಿ ಕಲಂ 392, 216(A) ಐಪಿಸಿ ಹಾಗೂ 196, 115 ಸಹಪಠಿತ 190(2) ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್. ಅವರು ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಉಪ್ಪಿನಂಗಡಿಯ ಪಿ.ಎಸ್.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಮನು ಬಿ.ಕೆ. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ತಲಾ ₹10 ಸಾವಿರ ದಂಡ ಹಾಗೂ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ ಹೆಗ್ಡೆ ಅವರು ಸಮರ್ಥವಾಗಿ ವಾದ ಮಂಡಿಸಿದರು.








