





ಹೊಸದಿಲ್ಲಿ: ಜೂ.19: NEET – UGಮರುಪರೀಕ್ಷೆಯು ನಿಷ್ಪಕ್ಷಪಾತ ಮತ್ತು ಸುಸೂತ್ರವಾಗಿ ನಡೆಯುವ ಸಲುವಾಗಿ ಜೂನ್ 20 ಮತ್ತು 21ರಂದು ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರಜೆ ನೀಡದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ತನ್ನ ವ್ಯಾಪ್ತಿಗೆ ಒಳಪಡುವ ಎಲ್ಲ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ವೈದ್ಯಕೀಯ ಕಾಲೇಜುಗಳ ಕೆಲವು ವಿದ್ಯಾರ್ಥಿಗಳು ಭಾಗಿಯಾಗಿರುವ ಘಟನೆಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ಗುರುವಾರ ಹೊರಡಿಸಿದ ತೋಟಿಸ್‌ನಲ್ಲಿ ತಿಳಿಸಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆಯ ನಿರ್ವಹಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಉನ್ನತ ಶಿಕ್ಷಣ ಇಲಾಖೆಯಿಂದ ಸ್ವೀಕರಿಸಿರುವ ನಿರ್ದೇಶನಗಳಿಗೆ ಅನುಗುಣವಾಗಿ ಈ ಸೂಚನೆ ನೀಡಲಾಗಿದೆ ಎಂದು ಅದು ಹೇಳಿದೆ.ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಆಯೋಗವು ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದೆ.








