
ಬೆಂಗಳೂರು : ಮಂಗಳೂರಿನಲ್ಲಿ ಶೀಘ್ರ ಸಚಿವ ಕ್ಯಾಬೆನೆಟ್ ಸಭೆ ನಡೆಸಲಾಗುವುದು. ಅದಕ್ಕೂ ಮುನ್ನ ಎಲ್ಲಾ ರೀತಿಯ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.





ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಆರ್‌ಝಡ್ ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ ತಕರಾರುಗಳ ಬಗ್ಗೆ ಮುಂದಿನ 15-20 ದಿನದೊಳಗೆ ವರದಿ ಸಿದ್ದಪಡಿಸಬೇಕು. ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆಶಿ ಸೂಚನೆ ನೀಡಿದ್ದಾರೆ.
ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವುದರ ಜತೆಗೆ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು. ಸದ್ಯ ಅನುಮೋದಿಸಿರುವ 45 ಯೋಜನೆಗಳಿಂದ 4500 ಉದ್ಯೋಗ ಸೃಷ್ಟಿಯಾಗುತ್ತದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಕರಾವಳಿ ತೀರದ ಪರಿಸರಕ್ಕೆ ಧಕ್ಕೆಯಾಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಯೋಜನೆಯಲ್ಲಿ ಅಳವಡಿಸಬೇಕು ಎಂದು ಹೇಳಿದರು.
ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ತೊಂದರೆ ಆಗದಂತೆ ನಾನಾ ಅನುಮತಿಗಳನ್ನು ಪಡೆಯಲು ಏಕ ಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ ಜಾರಿಗೊಳಿಸಬೇಕಿದೆ ಎಂದ ಮುಖ್ಯಮಂತ್ರಿ ಹೆಲಿ ಟೂರಿಸಂ ಅಭಿವೃದ್ಧಿಗೆ ಒತ್ತು ನೀಡಲು ಉದ್ಯಮಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಚಿತ್ರನಟ ರಿಷಬ್ ಶೆಟ್ಟಿ, ಶಾಸಕರಾದ ಜಿ.ಟಿ. ದೇವೇಗೌಡ, ಸತೀಶ್ ಸೈಲ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.








