
ವಿಟ್ಲ: ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಮತ್ತು ಸೇವನೆಗೆ ಅವಕಾಶ ನೀಡದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ ನಡೆಯಿತು.ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕ (ಪಿಎಸ್‌ಐ) ರಾಮಕೃಷ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಬಾರ್, ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರು ಭಾಗವಹಿಸಿದರು.ಸಭೆಯಲ್ಲಿ ಅಪ್ರಾಪ್ತ ವಯಸ್ಕರಿಗೆ ಮದ್ಯದ ಪ್ರವೇಶ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವ ಬಗ್ಗೆ ವಿವರಿಸಲಾಯಿತು. ಸರ್ಕಾರದಿಂದ ವಿತರಿಸಲಾದ ವಯಸ್ಸಿನ ಪುರಾವೆ ಅಥವಾ ಗುರುತಿನ ಚೀಟಿ ಇಲ್ಲದೆ ಯಾವುದೇ ವ್ಯಕ್ತಿಗೆ ಮದ್ಯ ಮಾರಾಟ ಮಾಡುವ ಸಂಸ್ಥೆಗಳಿಗೆ ಪ್ರವೇಶ ನೀಡಬಾರದು ಎಂದು ಸೂಚಿಸಲಾಯಿತು.
ಅಲ್ಲದೆ, ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಕೆ ಮಾಡುವುದು, ಸೇವನೆಗೆ ಅವಕಾಶ ಕಲ್ಪಿಸುವುದು ಅಥವಾ ಅದಕ್ಕೆ ಬೆಂಬಲ ನೀಡುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.ಮದ್ಯ ಮಾರಾಟ ಕೇಂದ್ರಗಳು ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಮಾಜದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.












