



ರಾಮನಗರ: ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಟೇನರ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.
ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಕಂಟೇನರ್ ಅನ್ನು ಓವರ್ ಟೇಕ್ ಮಾಡಲು ಬಸ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಂಟೇನರ್‌ನ ಹಿಂಭಾಗಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಂಟೇನರ್ ಉರುಳಿ ಬಿದ್ದಿದ್ದು, ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.








