Tuesday, July 7, 2026
spot_imgspot_img
spot_imgspot_img

ನಕಲಿ ಸಹಿ, ನಕಲಿ ದಾಖಲೆಗಳ ಜಾಲ-ಒಕ್ಕೂಟದಲ್ಲಿ ₹23 ಲಕ್ಷ ವಂಚನೆ- ಮುಖ್ಯ ಪುಸ್ತಕ ಬರಹಗಾರ್ತಿ ಸೇರಿ ದಂಪತಿ ಬಂಧನ

- Advertisement -
- Advertisement -

ಉಡುಪಿ, ಜು.7: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಪೊಲೀಸರ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ಒಕ್ಕೂಟದ ದಾಖಲಾತಿಯಲ್ಲಿ ನಮೂದಿಸಿದ್ದರೂ, ಅದನ್ನು ಬ್ಯಾಂಕ್ ಖಾತೆಗೆ ಜಮೆ ಮಾಡದೇ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅಲ್ಲದೆ, ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವ ಆರೋಪವೂ ಕೇಳಿಬಂದಿದೆ.ಲೆಕ್ಕಪರಿಶೋಧನೆ ವೇಳೆ ವಂಚನೆ ಪತ್ತೆಯಾಗದಂತೆ ವಿವಿಧ ಸಾಲ ಖಾತೆ ಪುಸ್ತಕಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಮೂಲಕ ಒಟ್ಟು ₹23 ಲಕ್ಷ ದುರ್ಬಳಕೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಹಿರಿಯಡಕ ಪೊಲೀಸರು, ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಅವರ ನಿರ್ದೇಶನ ಹಾಗೂ ವೃತ್ತ ನಿರೀಕ್ಷಕ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಜುಲೈ 6ರಂದು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿವಿಧ ಸದಸ್ಯರ ಹೆಸರಿನಲ್ಲಿ ನಕಲಿ ಸಹಿ ಹಾಗೂ ದಾಖಲೆಗಳನ್ನು ಸೃಷ್ಟಿಸಿರುವುದು ಗೊತ್ತಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!