



ಲಕ್ನೋ: ನಾಲ್ಕು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ಮಾಮುರಾ ಗ್ರಾಮದಲ್ಲಿ ಸಂಭವಿಸಿದೆ.
ಸುಮಾರು 50 ಕುಟುಂಬಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಚಾಲಿತ ವಾಹನ (ಇವಿ) ಚಾರ್ಜ್ ಮಾಡುತ್ತಿದ್ದ ವೇಳೆ ಕಿಡಿ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪಾರ್ಕಿಂಗ್ ಪ್ರದೇಶದಲ್ಲಿ ಆರಂಭವಾದ ಬೆಂಕಿ ಅಲ್ಲೇ ನಿಲ್ಲದೆ ಸಮೀಪದಲ್ಲಿದ್ದ ಪೆಟ್ರೋಲ್ ವಾಹನಗಳಿಗೂ ವ್ಯಾಪಿಸಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಪಾರ್ಕಿಂಗ್ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ.
ಬೆಂಕಿಯ ಜೊತೆಗೆ ವ್ಯಾಪಕ ಪ್ರಮಾಣದಲ್ಲಿ ದಟ್ಟ ಹೊಗೆ ಮೇಲಿನ ಮಹಡಿಗಳಿಗೆ ಹರಡಿದ್ದರಿಂದ ನಿವಾಸಿಗಳು ತಮ್ಮ ಮನೆಗಳಲ್ಲೇ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಏಳು ಅಗ್ನಿಶಾಮಕ ವಾಹನಗಳು, ಹೈಡ್ರಾಲಿಕ್ ಪ್ಲಾಟ್ಫಾರ್ಮ್ ಹಾಗೂ ವಿಶೇಷ ರಕ್ಷಣಾ ವಾಹನಗಳ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಕಟ್ಟಡದಲ್ಲಿದ್ದ ಸುಮಾರು 50 ಕುಟುಂಬಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. ಕಾರ್ಯಾಚರಣೆಯ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸದಂತೆ ತಡೆಯಲು ಅಧಿಕಾರಿಗಳು ನಿರಂತರವಾಗಿ ಶ್ರಮಿಸಿದರು.
ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.








