ಬಂಟ್ವಾಳ, ಜು.16: ಬಂಟ್ವಾಳ ತಾಲೂಕಿನ ಬಿಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದ ಯುವತಿ ಹತ್ಯೆ ಪ್ರಕರಣವನ್ನು ಹಿಂದು ಜಾಗರಣ ವೇದಿಕೆ, ಮಂಗಳೂರು ಗ್ರಾಮಾಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ.ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಉಳಿಗ್ರಾಮ ನಿವಾಸಿ ಲಾವಣ್ಯ (21) ಮೃತಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ನಿವಾಸಿ ಚೇತನ್ ವಿರುದ್ಧ ಆರೋಪ ಕೇಳಿಬಂದಿದೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರಕಟಣೆ ನೀಡಿರುವ ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ಸಮಾಜದಲ್ಲಿ ಇಂತಹ ಅಮಾನುಷ ಹಾಗೂ ಕ್ರೂರ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ. ಯುವತಿಯ ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡ ಈ ಘಟನೆ ಅತ್ಯಂತ ದುಃಖಕರವಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.
ಪ್ರಕರಣದ ಸಂಪೂರ್ಣ ತನಿಖೆಯನ್ನು ಪೊಲೀಸರು ತ್ವರಿತಗತಿಯಲ್ಲಿ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು ಎಂದು ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ.








