Friday, July 17, 2026
spot_imgspot_img
spot_imgspot_img

7 ಲಕ್ಷಕ್ಕೆ ತಮ್ಮ ಮಗಳನ್ನೇ ಮಾರಾಟ ಮಾಡಿದ ಆರೋಪ: ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಯುವತಿಯ ರಕ್ಷಣೆ; ಪೋಷಕರ ವಿರುದ್ಧ ಕ್ರಮಕ್ಕೆ ಆಗ್ರಹ

- Advertisement -
- Advertisement -

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಪಿಕ್ಕಿ ಕಾಲೋನಿಯ 20 ವರ್ಷದ ಯುವತಿಯನ್ನು ಹಣಕ್ಕಾಗಿ ಪೋಷಕರೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ಕ್ರಾಂತಿ ಮತ್ತು ರಾಜಶೇಖರ್ ಅವರ ಪುತ್ರಿ ನಂದಿತಾ (20) ಸುಮಾರು ನಾಲ್ಕು ತಿಂಗಳ ಹಿಂದೆ ಕುಟುಂಬದೊಂದಿಗೆ ಗಿಡಮೂಲಿಕೆ ವ್ಯಾಪಾರದ ನೆಪದಲ್ಲಿ ಸೆನೆಗಲ್ ದೇಶಕ್ಕೆ ತೆರಳಿದ್ದರು ಎನ್ನಲಾಗಿದೆ.ದೂರು ಪ್ರಕಾರ, ಸುಮಾರು 10 ದಿನಗಳ ಹಿಂದೆ ನಂದಿತಾಳನ್ನು ₹7 ಲಕ್ಷಕ್ಕೆ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಯುವತಿ ಪರಿಚಯದವರನ್ನು ಸಂಪರ್ಕಿಸಿ, ತನ್ನನ್ನು ಹಣಕ್ಕಾಗಿ ಪೋಷಕರೇ ಮಾರಾಟ ಮಾಡಿದ್ದಾರೆ ಎಂದು ತಿಳಿಸಿದ್ದಲ್ಲದೆ, ತನ್ನ ಪರಿಸ್ಥಿತಿಯನ್ನು ವಿವರಿಸುವ ವಿಡಿಯೋ ಸಂದೇಶವನ್ನೂ ಕಳುಹಿಸಿದ್ದಾಳೆ ಎಂದು ಹೇಳಲಾಗಿದೆ.

ಈ ಮಾಹಿತಿ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ಬಂದ ಬಳಿಕ, ಸ್ಥಳೀಯ ಅಧಿಕಾರಿಗಳು ಹಾಗೂ ಸೆನೆಗಲ್ ಪೊಲೀಸರ ಸಹಕಾರದೊಂದಿಗೆ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಇದೇ ವೇಳೆ, ಯುವತಿಯನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದು ಸಂಬಂಧಿಕರಿಗೆ ಪೋಷಕರು ಬೇರೆ ರೀತಿಯ ಮಾಹಿತಿ ನೀಡಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಯುವತಿ ರಕ್ಷಿಸಲ್ಪಟ್ಟಿರುವ ವಿಚಾರ ತಿಳಿದ ನಂತರ ಪೋಷಕರು ಭಾರತಕ್ಕೆ ಮರಳಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಜುಲೈ 15ರಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೇರಿದಂತೆ ಅನ್ವಯವಾಗುವ ಕಾನೂನುಗಳಡಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇಂತಹ ಘಟನೆ ಹಕ್ಕಿಪಿಕ್ಕಿ ಸಮುದಾಯದ ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಸಂಘ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

- Advertisement -

Related news

error: Content is protected !!