ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪಾಲಕರು ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ಸಂಬಂಧಿತ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸಹಾಯಕ್ಕಾಗಿ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಸಂಪರ್ಕ ಸಂಖ್ಯೆಗಳು:ಟೋಲ್ ಫ್ರೀ: 1077ದೂರವಾಣಿ: 0824-2442590








