
ಸುಳ್ಯ: ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಅಪ್ರಾಪ್ತ ಬಾಲಕಿ ಬಳಿಕ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ, ಆಕೆಯನ್ನು ಪತ್ತೆಹಚ್ಚಿದ ಸುಳ್ಯ ಪೊಲೀಸರು, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನನ್ನು ಬಂಧಿಸಿದ್ದಾರೆ.
ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರಿ 2026ರ ಮೇ 7ರಂದು ಮಂಗಳೂರಿಗೆ ಕೆಲಸಕ್ಕೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದು, ಬಳಿಕ ಮನೆಗೆ ಮರಳಿರಲಿಲ್ಲ.
ಈ ಹಿನ್ನೆಲೆಯಲ್ಲಿ ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 64/2026ರಡಿ ಕಲಂ 137(2) BNS-2023 ಅನ್ವಯ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಮುಂದುವರಿದ ವೇಳೆ, ಜುಲೈ 22ರಂದು ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದರು. ವಿಚಾರಣೆ ವೇಳೆ, ಕಡಬ ನಿವಾಸಿಯಾದ ಧನುಷ್ (18) ಎಂಬಾತ ತನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಾಳೆ.
ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಪೋಕ್ಸೊ (POCSO) ಕಾಯ್ದೆಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.ಆರೋಪಿ ಧನುಷ್‌ನನ್ನು ಜುಲೈ 22ರಂದು ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.








