ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಮಹತ್ವದ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರ ಆದೇಶದಂತೆ, ಆಗಸ್ಟ್ 8, 2026ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಆದೇಶವು ಎಲ್ಲಾ ವಸತಿ ಶಾಲೆಗಳು ಹಾಗೂ ವಸತಿ ಕಾಲೇಜುಗಳಿಗೂ ಅನ್ವಯವಾಗಲಿದೆ.ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳನ್ನು ನದಿ, ಹೊಳೆ, ಕೆರೆ ಹಾಗೂ ತಗ್ಗು ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಸಾರ್ವಜನಿಕರು ಅನಗತ್ಯವಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಿ, ಹವಾಮಾನ ಇಲಾಖೆಯ ಹಾಗೂ ಜಿಲ್ಲಾಡಳಿತದ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.








