
ಯಾದಗಿರಿ: ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸಿ, ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ಸೇವೆ ಸಲ್ಲಿಸುತ್ತಿರುವ ಶಿವಕುಮಾರ್ ತಳವಾರ ಅವರ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸುವಂತೆ ಭಾರತೀಯ ಸೇನೆಯು ಮುಖ್ಯಮಂತ್ರಿ, ಗೃಹ ಸಚಿವರು, ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.
ಆ.1ರಂದು ಶಾಖಾಪುರ ಗ್ರಾಮದಲ್ಲಿ ಸತ್ತವರಿಗಾಗಿ ಗುಂಡಿ (ಕುಣಿ) ಅಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ತಳವಾರ ಅವರ ತಾಯಿ, ಮಾವ ಸೇರಿದಂತೆ ದಲಿತ ಸಮುದಾಯದ ಕೆಲವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಕರ್ತವ್ಯದಲ್ಲಿದ್ದ ಶಿವಕುಮಾರ್ ಅವರು ಘಟನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ವಿಡಿಯೋ ಮೂಲಕ ತಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.17 ಮಂದಿ ವಿರುದ್ಧ ಎಫ್‌ಐಆರ್ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಆದರೆ ಪ್ರಕರಣ ದಾಖಲಾಗಿ ಹಲವು ದಿನಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ ಎಂದು ದಲಿತ ಸಂಘಟನೆಗಳು ಆರೋಪಿಸಿದ್ದು, ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿವೆ.ಕುಟುಂಬದ ಸುರಕ್ಷತೆಗೆ ಸೇನೆಯ ಮನವಿಶಿವಕುಮಾರ್ ಅವರ ಕುಟುಂಬದ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಸೇನೆ, ಕುಟುಂಬಕ್ಕೆ ತಕ್ಷಣ ಪೊಲೀಸ್ ರಕ್ಷಣೆ ಒದಗಿಸಿ, ಭಯವಿಲ್ಲದೆ ಗ್ರಾಮದಲ್ಲಿ ವಾಸಿಸಲು ಸುರಕ್ಷಿತ ವಾತಾವರಣ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲೇ ಇರದ ಕೆಲವರ ಹೆಸರುಗಳೂ ದೂರಿನಲ್ಲಿ ಸೇರಿರುವ ಬಗ್ಗೆ ಮಾಹಿತಿ ಇದ್ದು, ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ತನಿಖೆಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಲವು ಪ್ರತಿಭಟನೆಗಳನ್ನು ನಡೆಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.








