



ಬೆಂಗಳೂರು: ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದಡಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಅಲಿಯಾಸ್ ಮಂಜಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರದ ಖಾಸಗಿ ಹೋಟೆಲ್ವೊಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗೊಟ್ಟಿಗೆರೆ ಜಂಕ್ಷನ್ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ್ ಅವರು ಸಂಚಾರ ನಿಯಂತ್ರಣ ಮಾಡುತ್ತಿದ್ದರು. ಈ ವೇಳೆ ವಾಹನಗಳನ್ನು ನಿಲ್ಲಿಸುವಂತೆ ಕೈ ಸನ್ನೆ ನೀಡಿದಾಗ ಗೊಟ್ಟಿಗೆರೆ ಮಂಜುನಾಥ್ ಅವರ ವಾಹನವನ್ನೂ ನಿಲ್ಲಿಸುವಂತೆ ಸೂಚಿಸಿದ್ದಾರೆ.ಇದರಿಂದ ಆಕ್ರೋಶಗೊಂಡ ಮಂಜುನಾಥ್ ಕಾರಿನಿಂದ ಇಳಿದು, “ನನ್ನ ಗಾಡಿಯನ್ನೇ ನಿಲ್ಲಿಸ್ತೀಯಾ?” ಎಂದು ಪೊಲೀಸ್ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಬಳಿಕ ಅರುಣ್ ಅವರ ಕಾಲರ್ ಹಿಡಿದು ಹಲ್ಲೆ ನಡೆಸಿದ್ದು, ಕಾಲಿನಿಂದ ಒದೆಯಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಗಮನಿಸಿದ ಸಾರ್ವಜನಿಕರು ಮಧ್ಯಪ್ರವೇಶಿಸಿ ಜಗಳ ಬಿಡಿಸಿ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಹುಳಿಮಾವು ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.ಪ್ರಕರಣ ದಾಖಲಾಗುತ್ತಿದ್ದಂತೆ ಮಂಜುನಾಥ್ ತಲೆಮರೆಸಿಕೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ಖಾಸಗಿ ಹೋಟೆಲ್ನಲ್ಲಿ ಅಡಗಿದ್ದ ಅವರನ್ನು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ.








