ಹರಿದ್ವಾರ: ಶಿಕ್ಷಣ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಯೋಗ ಗುರು ಬಾಬಾ ರಾಮ್‌ದೇವ್ ಶನಿವಾರ ನರೇಂದ್ರ ಮೋದಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರಕಾರ ಅಕ್ರಮವನ್ನು ಕೂಡಲೇ ಸರಿಪಡಿಸದಿದ್ದರೆ, ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಬಹುದು. ತಾನು ಕೂಡ ಪ್ರತಿಭಟನೆಗೆ ಇಳಿಯಬೇಕಾಗಬಹುದು ಎಂದು ಹೇಳಿದ್ದಾರೆ.
ಪ್ರತಿಭಟನೆಗಳು ಸಂವಿಧಾನದ ಚೌಕಟ್ಟಿನೊಳಗೆ ಇರಬೇಕು ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಹಿಂಸಾಚಾರ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಯುವ ಸಮುದಾಯಕ್ಕೆ ಕರೆ ನೀಡಿದರು.
ಇಲ್ಲಿನ ಪತಂಜಲಿ ಯೋಗ ಪೀಠದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮ್‌ದೇವ್, ಶಾಲೆ ಮತ್ತು ಕಾಲೇಜುಗಳಲ್ಲಿ ಶಿಕ್ಷಕರು, ನೀರು ಮತ್ತು ವಿದ್ಯುತ್‌ನಂತಹ ಮೂಲಭೂತ ಸೌಕರ್ಯಗಳ ಕೊರತೆಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.
ಸರಕಾರಿ ಉದ್ಯೋಗಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಮತ್ತು ಹಣದ ಬಲ ಪ್ರಭಾವ ಬೀರುತ್ತಿದೆ ಎಂದೂ ಅವರು ಆರೋಪಿಸಿದರು.







