

ಮಂಗಳೂರು: ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಆಚರಣೆಗಳು ಹಾಗೂ ಮೆರವಣಿಗೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಲವು ಕಠಿಣ ಷರತ್ತುಗಳನ್ನು ವಿಧಿಸಿದ್ದಾರೆ. ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸುವಂತಿಲ್ಲ. ರಾತ್ರಿ 11.30ರ ನಂತರ ಮೆರವಣಿಗೆ ನಡೆಸಲು ಅವಕಾಶ ಇರುವುದಿಲ್ಲ. ನಿಗದಿತ ಸ್ಥಳ ಮತ್ತು ಅನುಮೋದಿತ ಮಾರ್ಗದಲ್ಲಿಯೇ ಕಾರ್ಯಕ್ರಮ ನಡೆಯಬೇಕು. ಖಾಸಗಿ ಸ್ಥಳದಲ್ಲಿ ಕಾರ್ಯಕ್ರಮ ಆಯೋಜಿಸುವವರು ಸ್ಥಳದ ಮಾಲೀಕರಿಂದ NOC ಪಡೆಯಬೇಕು.ಡಿಜೆ ಸಂಪೂರ್ಣ ನಿಷೇಧ.


ಕಾರ್ಯಕ್ರಮಗಳಲ್ಲಿ ಡಿಜೆ, ಜೋರಾದ ಸ್ಪೀಕರ್ ಸೇರಿದಂತೆ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಧ್ವನಿವರ್ಧಕ ಬಳಸಲು ಪೂರ್ವಾನುಮತಿ ಕಡ್ಡಾಯವಾಗಿದ್ದು, ರಾತ್ರಿ 10 ಗಂಟೆಗೆ ಅವುಗಳನ್ನು ಸ್ಥಗಿತಗೊಳಿಸಬೇಕು. ವಾಣಿಜ್ಯ ಪ್ರದೇಶದಲ್ಲಿ 65 ಡೆಸಿಬಲ್, ವಾಸಸ್ಥಳದಲ್ಲಿ 55 ಡೆಸಿಬಲ್ ಹಾಗೂ ನಿಶ್ಯಬ್ದ ವಲಯದಲ್ಲಿ 50 ಡೆಸಿಬಲ್ಗಿಂತ ಹೆಚ್ಚಿನ ಶಬ್ದ ಉಂಟುಮಾಡುವಂತಿಲ್ಲ.ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ, ಸಿಸಿಟಿವಿ ಕ್ಯಾಮೆರಾಗಳ ವ್ಯವಸ್ಥೆ ಮಾಡಬೇಕು. ಸಿಸಿಟಿವಿ ದೃಶ್ಯಾವಳಿಗಳನ್ನು ಕನಿಷ್ಠ 30 ದಿನಗಳ ಕಾಲ ಸಂಗ್ರಹಿಸಬೇಕು. ಜನಸಂದಣಿ ನಿಯಂತ್ರಣಕ್ಕೆ ಅಗತ್ಯ ಸಂಖ್ಯೆಯ ಸ್ವಯಂಸೇವಕರನ್ನು ನಿಯೋಜಿಸುವಂತೆ ಸೂಚಿಸಲಾಗಿದೆ.

ಯಾವುದೇ ಧರ್ಮ, ಸಮುದಾಯ ಅಥವಾ ವ್ಯಕ್ತಿಯ ವಿರುದ್ಧ ದ್ವೇಷ ಉಂಟುಮಾಡುವ ಘೋಷಣೆ, ಭಿತ್ತಿಪತ್ರ, ಪ್ರದರ್ಶನ ಅಥವಾ ಸಾಮಾಜಿಕ ಜಾಲತಾಣದ ಪೋಸ್ಟ್ಗಳನ್ನು ಪ್ರಕಟಿಸುವಂತಿಲ್ಲ. ಕಾರ್ಯಕ್ರಮಗಳಲ್ಲಿ ಮಹಿಳೆಯರ ಚುಡಾವಣೆ, ಹಿಂಬಾಲಿಸುವಿಕೆ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ಯಾವುದೇ ಕೃತ್ಯಗಳಿಗೆ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ವಾಹನ, ಅಗ್ನಿ ಸುರಕ್ಷತೆಗೂ ಆದ್ಯತೆಮೆರವಣಿಗೆ ಹಾಗೂ ಕಾರ್ಯಕ್ರಮಗಳಲ್ಲಿ ಬಳಸುವ ವಾಹನಗಳು ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಪೆಂಡಾಲ್ಗಳು ಹಾಗೂ ವಾಹನಗಳ ಎತ್ತರವು ಸಂಬಂಧಿತ ಕಾನೂನು ಮತ್ತು ಮೆಸ್ಕಾಂ ನಿಯಮಗಳಿಗೆ ಅನುಗುಣವಾಗಿರಬೇಕು.
ಅಗ್ನಿಶಾಮಕ ಉಪಕರಣಗಳು, ಆಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆ ಕಡ್ಡಾಯವಾಗಿದೆ.ವಾಹನ ಮತ್ತು ಪಾದಚಾರಿ ಸಂಚಾರಕ್ಕೆ ಅಡ್ಡಿಯಾಗದಂತೆ ವ್ಯವಸ್ಥೆ ಮಾಡಬೇಕು. ತುರ್ತು ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ತಡೆ ಉಂಟುಮಾಡಬಾರದು. ನಿಗದಿತ ಸ್ಥಳದಲ್ಲಿಯೇ ವಾಹನಗಳನ್ನು ಪಾರ್ಕ್ ಮಾಡಬೇಕು.ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಮಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಶಸ್ತ್ರಾಸ್ತ್ರ ಅಥವಾ ಅಪಾಯಕಾರಿ ವಸ್ತುಗಳನ್ನು ಪ್ರದರ್ಶಿಸುವುದು ಹಾಗೂ ಸಾಗಿಸುವುದು ನಿಷೇಧಿಸಲಾಗಿದೆ. ಅನುಮತಿ ಇಲ್ಲದೆ ಡ್ರೋನ್ ಅಥವಾ UAV ಬಳಸುವಂತಿಲ್ಲ. ಮೆರವಣಿಗೆಯಲ್ಲಿ ಪ್ರಾಣಿಗಳನ್ನು ಬಳಸಬೇಕಾದರೆ ಪೂರ್ವಾನುಮತಿ ಪಡೆಯಬೇಕು.ಬ್ಯಾನರ್, ಪ್ಲೆಕ್ಸ್ಗಳನ್ನು ಸಂಬಂಧಿತ ಪ್ರಾಧಿಕಾರದ ಅನುಮತಿ ಇಲ್ಲದೆ ಅಳವಡಿಸುವಂತಿಲ್ಲ. ಕಾರ್ಯಕ್ರಮ ಮುಗಿದ ತಕ್ಷಣ ಅವುಗಳನ್ನು ತೆರವುಗೊಳಿಸಿ ಸ್ಥಳವನ್ನು ಸ್ವಚ್ಛಗೊಳಿಸಬೇಕು.ಪೊಲೀಸ್ ಅಥವಾ ಅಧಿಕೃತ ಅಧಿಕಾರಿಗಳು ಯಾವುದೇ ಸಂದರ್ಭದಲ್ಲಿ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಬಹುದಾಗಿದ್ದು, ತಪಾಸಣೆಗೆ ಆಯೋಜಕರು ಸಹಕರಿಸಬೇಕು. ಅನುಮಾನಾಸ್ಪದ ಚಟುವಟಿಕೆಗಳು, ಸುಳ್ಳು ಮಾಹಿತಿ ಅಥವಾ ಗಲಭೆ ಸಂಬಂಧಿತ ಮಾಹಿತಿಯನ್ನು ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ 112ಕ್ಕೆ ತಿಳಿಸುವಂತೆ ಸೂಚಿಸಲಾಗಿದೆ.
ಷರತ್ತುಗಳ ಉಲ್ಲಂಘನೆಯಾದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023, ಕರ್ನಾಟಕ ಪೊಲೀಸ್ ಕಾಯ್ದೆ, ಪರಿಸರ ಸಂರಕ್ಷಣಾ ಕಾಯ್ದೆ, ಮೋಟಾರು ವಾಹನ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ, ಡ್ರೋನ್ ನಿಯಮಗಳು ಸೇರಿದಂತೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಎಚ್ಚರಿಸಿದ್ದಾರೆ.ಪ್ರತಿ ಹಬ್ಬದ ಮುನ್ನ ಕಾರ್ಯಕ್ರಮದ ನಿಖರ ಮಾರ್ಗ, ಸಮಯ, ಧ್ವನಿ ನಿಯಂತ್ರಣ ಸೇರಿದಂತೆ ಅಗತ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು.
ಕಾರ್ಯಕ್ರಮದ ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ವಿವರ ನೀಡದ ಆಯೋಜಕರಿಗೆ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.








