



ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸ್ಪರ್ಧಿಸಿ, 18 ಮತಗಳ ಪೈಕಿ ಎಲ್ಲಾ 18 ಮತಗಳನ್ನು ಪಡೆದು ಅವಿರೋಧದಂತೆಯೇ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಪಾತ್ರರಾಗಿದ್ದಾರೆ.
ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾಗಿ ಹಾಗೂ ಇರ್ದೆ-ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ಮಟ್ಟದಲ್ಲೂ ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಯ ಪ್ರತಿನಿಧಿತ್ವವನ್ನು ಮತ್ತಷ್ಟು ಬಲಪಡಿಸಿದ್ದಾರೆ.
ಎಲ್ಲಾ 18 ಮತಗಳನ್ನು ಪಡೆದ ಈ ಐತಿಹಾಸಿಕ ಜಯವು, ಅವರ ಸಹಕಾರಿ ಸೇವೆ ಮತ್ತು ವಿಶ್ವಾಸಾರ್ಹತೆಗೆ ಸಂದ ದೊಡ್ಡ ಗೌರವ ಎಂದು ಸಹಕಾರ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.








