Monday, September 7, 2026
spot_imgspot_img
spot_imgspot_img

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್: ಇದೇ ವರ್ಷದಿಂದ ಜಾರಿಗೆ ಚಿಂತನೆ-ಶಿಕ್ಷಣ ಸಚಿವ ಮಧು ಬಂಗಾರಪ್ಪ

- Advertisement -
- Advertisement -

ಬೆಂಗಳೂರು: ಒಂದನೇ ತರಗತಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಯೋಜನೆಯನ್ನು ಸಾಧ್ಯವಾದರೆ ಇದೇ ವರ್ಷದಿಂದ ಜಾರಿಗೆ ತರಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶನಿವಾರ ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಥಣಿಸಂದ್ರದ ಸರ್ಕಾರಿ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. 15 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯೂ ಪ್ರಗತಿಯಲ್ಲಿದೆ ಎಂದು ಸಚಿವರು ಹೇಳಿದರು.ಸರ್ಕಾರಿ ಶಾಲೆಗಳ ಕುರಿತು ಟೀಕೆ-ಟಿಪ್ಪಣಿಗಳು ಬರುತ್ತಲೇ ಇರುತ್ತವೆ. ಆದರೆ, ಥಣಿಸಂದ್ರದ ಸರ್ಕಾರಿ ಶಾಲೆಯಲ್ಲಿ ಉತ್ತಮ ಸೌಕರ್ಯಗಳಿವೆ. ದೆಹಲಿಯ ಸರ್ಕಾರಿ ಶಾಲೆಗಳಿಗಿಂತಲೂ ಇದು ಉತ್ತಮವಾಗಿದೆ. ಸರ್ಕಾರ ಶಿಕ್ಷಕರನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ತಿಳಿಸಿದರು.

ನಿವೃತ್ತ ಶಿಕ್ಷಕರ ಸೇವೆ ಬಳಸಿಕೊಳ್ಳಲು ಚಿಂತನೆ

ನಿವೃತ್ತರಾದ ಶಿಕ್ಷಕರು ಆಸಕ್ತಿಯಿಂದ ಮತ್ತೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.ರಾಜ್ಯದಲ್ಲಿ ಸುಮಾರು 46 ಸಾವಿರ ಶಾಲೆಗಳಿದ್ದು, ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ರಾಜ್ಯದ ಮಾದರಿ ಶಾಲೆಗಳನ್ನಾಗಿ ರೂಪಿಸಲಾಗುವುದು. ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.

ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಶಾಲೆಗೆ ಹಾಜರಾಗುವ ಮಕ್ಕಳಿಗೆ ದಿನಕ್ಕೆ ಒಂದು ರೂಪಾಯಿ ನೀಡುವ ‘ಅಕ್ಷಯ’ ಯೋಜನೆಯನ್ನು ಜಾರಿಗೆ ತಂದಿದ್ದರು. ಇದೇ ಯೋಜನೆ ಮುಂದೆ ಬಿಸಿಯೂಟ ಯೋಜನೆ ಜಾರಿಗೆ ಕಾರಣವಾಯಿತು ಎಂದು ಸಚಿವರು ಸ್ಮರಿಸಿದರು.ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಸರ್ಕಾರದ ಅವಧಿಯಲ್ಲಿನ ಕಾರಣಗಳಿಂದ ನ್ಯಾಯಾಲಯದ ವಿಚಾರಣೆಯಲ್ಲಿ ತಡೆಹಿಡಿಯಲಾಗಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗಿದೆ.

ಅಲ್ಲದೆ, 52 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಶಿಕ್ಷಕರೇ ಇಲ್ಲ ಎಂಬ ಪರಿಸ್ಥಿತಿಯನ್ನು ತಾನು ಒಪ್ಪುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

- Advertisement -

Related news

error: Content is protected !!