


ಬೆಳ್ಳಾರೆ: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಳವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ದೂರುದಾರರು ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ದಿನಾಂಕ 02.09.2026 ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ಮೇಲ್ವಿಚಾರಕರಿಗೆ ತಿಳಿಸಿದ್ದಾರೆ.ದೂರುದಾರರು ಸಿಸಿ ಕ್ಯಾಮರಾ ಪರಿಶೀಲಿಸಿದಾಗ, ದಿನಾಂಕ 02.09.2026 ರಂದು ಬೆಳಗಿನ ಜಾವ ಅಪರಿಚಿತ ಯುವಕನೋರ್ವ ವಿದ್ಯಾರ್ಥಿ ನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ, ಒಣಗಿಸಲು ಹಾಕಿದ್ದ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ.
ಈ ಬಗ್ಗೆ ದಿನಾಂಕ ಸೆ.5 ರಂದು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 54/2026 ಕಲಂ 331(4), 305 BNS-2023 ರಂತೆ ಪ್ರಕರಣ ದಾಖಲಾಗಿದೆ.ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿ ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ದಿನಾಂಕ ಸೆ. 7 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ದಿನಾಂಕ ಸೆ. 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.








