Monday, September 21, 2026
spot_imgspot_img
spot_imgspot_img

ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ನರರೋಗ ತಜ್ಞ ಸಜೀವ ದಹನ

- Advertisement -
- Advertisement -

ಹೈದರಾಬಾದ್: ವೋಲ್ವೋ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ ಬೆಳಗ್ಗೆ ಸುಮಾರು 7:15ಕ್ಕೆ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.

ಕಾರು ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರಾದರೂ, ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವ ಮುನ್ನವೇ ಕಾರಿನೊಳಗಿದ್ದ ವೈದ್ಯ ಬೆಂಕಿಯಲ್ಲಿ ಸಿಲುಕಿಕೊಂಡಿದ್ದರು. ಕಾರಿನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಮೃತರನ್ನು ಕಸಕುರ್ತಿ ಜಗದೀಶ್ ಎಂದು ಗುರುತಿಸಲಾಗಿದೆ. ಅವರು ಖಮ್ಮಂನ ಆಸ್ಪತ್ರೆಯಲ್ಲಿ ನರರೋಗ ತಜ್ಞರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಜಗದೀಶ್ ಅವರು ಖಮ್ಮಂನಿಂದ ಹೈದರಾಬಾದ್‌ಗೆ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲನೆ ವೇಳೆ ನಿದ್ದೆ ಬಂದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಧಿವಿಜ್ಞಾನ ತಂಡ ಸ್ಥಳಕ್ಕೆ ತೆರಳಿ ಸುಟ್ಟು ಕರಕಲಾದ ಅವಶೇಷಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ರವಾನಿಸಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!