


ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ 28 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅ.6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅ.9ರವರೆಗೆ ನಾಮಪತ್ರ ಹಿಂಪಡೆಯಬಹುದು. ಬಳಿಕ ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಸಂಬಂಧಿತ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಆಯೋಗ ತಿಳಿಸಿದೆ.
ಕರ್ನಾಟಕದಲ್ಲಿ ನಡೆಯಲಿರುವ ಚುನಾವಣೆ ಪದವೀಧರರ 2 ಹಾಗೂ ಶಿಕ್ಷಕರ 2 ಕ್ಷೇತ್ರಗಳಿಗೆ ಸೀಮಿತವಾಗಿದೆ. ಉತ್ತರ ಪ್ರದೇಶದಲ್ಲಿ 11, ಬಿಹಾರದಲ್ಲಿ 8, ಮಹಾರಾಷ್ಟ್ರದಲ್ಲಿ 5 ಸ್ಥಾನಗಳು ಸೇರಿವೆ. ಈ ಎಲ್ಲ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.
ಇದೇ ವೇಳೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಒಟ್ಟು 11 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಉತ್ತರ ಪ್ರದೇಶದ 10 ಹಾಗೂ ಉತ್ತರಾಖಂಡದ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲಿ ತೆರವಾಗಿರುವ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯಸಭೆಗೆ ಸಂಬಂಧಿಸಿದಂತೆ ಒಟ್ಟು 12 ಸ್ಥಾನಗಳಿಗೆ ಅ.16ರಂದು ಮತದಾನ ನಡೆಯಲಿದೆ.
ರಾಜ್ಯಸಭೆ ಚುನಾವಣೆಗೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅಕ್ಟೋಬರ್ 7ರಂದು ಪರಿಶೀಲನೆ, ಅಕ್ಟೋಬರ್ 9ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅಕ್ಟೋಬರ್ 16ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ವರದಿಯಿಂದ ತಿಳಿದುಬಂದಿದೆ.








