


ಮಂಗಳೂರು: ನಗರದ ಹೊರವಲಯದ MRPL ಭಾಗದಲ್ಲಿ ಇಂದು ದೊಡ್ಡ ಸದ್ದಿನೊಂದಿಗೆ ಗಂಭೀರ ಸ್ಪೋಟ ಸಂಭವಿಸಿದ ಘಟನೆ ನಡೆದಿದೆ.
ಸ್ಫೋಟದ ಬಳಿಕ CHT (ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್ ಯುನಿಟ್) ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಎಂಬುವವರಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿವೆ.
ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ, ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಡಿಸಿಪಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.








