ನವದೆಹಲಿ: ಪಾಕಿಸ್ತಾನಕ್ಕೆ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ, ನಿವೃತ್ತ ಸೇನಾ ಯೋಧ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಕೇಂದ್ರೀಯ ಸಂಸ್ಥೆಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ, ಗುವಾಹಟಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ಬೇಹುಗಾರಿಕೆ ಸಂಬಂಧಿತ ಚಟುವಟಿಕೆಗಳ ಆರೋಪದ ಮೇಲೆ ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಬಂಧಿಸಿದೆ.
ಭದ್ರತಾ ಪಡೆಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತನೊಬ್ಬನಿಗೆ ರವಾನಿಸುವಲ್ಲಿ ಆತ ಭಾಗಿಯಾಗಿದ್ದನೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಸಂಸ್ಥೆಗಳ ಮಾಹಿತಿಯ ಮೇರೆಗೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ನಿವೃತ್ತ ಸೇನಾ ಯೋಧ. ಈತ ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.








