

ಪುತ್ತೂರು: ಕೇರಳದ ಕಡೆಗೆ ಅಕ್ರಮವಾಗಿ 11 ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಅ.5ರ ಬೆಳಗಿನ ಜಾವ ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಸುಷ್ಮಾ ಜಿ. ಭಂಡಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ KA-19-AF-8558 ನೋಂದಣಿಯ ಪಿಕಪ್ ವಾಹನವನ್ನು ತಡೆದಿದ್ದಾರೆ.

ಈ ವೇಳೆ ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ. ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 125/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4, 6, 7, 12 ಹಾಗೂ ಪ್ರಿವೆನ್ಶನ್ ಆಫ್ ಕ್ರೂಯೆಲ್ಟಿ ಟು ಅನಿಮಲ್ಸ್ ಆಕ್ಟ್‌ನ ಸೆಕ್ಷನ್ 11(d) ಅಡಿ ಪ್ರಕರಣ ದಾಖಲಾಗಿದೆ.
ತನಿಖೆ ಮುಂದುವರಿಸಿದ ಪೊಲೀಸರು, ಯಾವುದೇ ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ ಇಬ್ಬರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.







