
ಮಂಗಳೂರು: ನ್ಯಾಯಾಲಯದ ಶಿಕ್ಷೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿ, ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 59/2013, ಐಪಿಸಿ ಕಲಂ 394 ಜೊತೆಗೆ 34ರ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ಮೊಹಮ್ಮದ್ ಮುಸ್ತಾಫ @ ಮುಸ್ತಾಫ (36) ಎಂಬಾತನನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮುಸ್ತಾಫ, ಶಿಕ್ಷಾ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್, ಬೆಂಗಳೂರಿನಲ್ಲಿ ಕ್ರಿಮಿನಲ್ ಅಪೀಲ್ ನಂ.602/2015 ದಾಖಲಿಸಿದ್ದ. ಆದರೆ ಮೇಲ್ಮನವಿ ಸಲ್ಲಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ದಸ್ತಗಿರಿ ವಾರಂಟ್ ಜಾರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಅ.6ರಂದು ಬೆಳಗ್ಗೆ ಆರೋಪಿಯ ಪ್ರಸ್ತುತ ವಿಳಾಸ ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ಶ್ರೀಮತಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಯ ಸಹಕಾರದಿಂದ ಆರೋಪಿಯನ್ನು ಬಂಧಿಸಲಾಯಿತು.








