

ಚಿಕ್ಕೋಡಿ: ಟಿಪ್ಪರ್ಗೆ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಗಂಗಾವತಿಯಿಂದ ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುತ್ತಿದ್ದ ಬಸ್ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾಗುತ್ತಿದ್ದ ವೇಳೆ ಟಿಪ್ಪರ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸಂಕೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಮುಂದುವರಿದಿರುವುದಾಗಿ ತಿಳಿದುಬಂದಿದೆ.







