
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ನಿರ್ಧರಿಸಿದೆ.
ಪ್ರಜ್ವಲ್ ರೇವಣ್ಣ ಅವರು ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇತ್ತೀಚೆಗೆ ಅವರಿದ್ದ ಬ್ಯಾರಕ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ, ಕೊಠಡಿಯಲ್ಲಿ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಪತ್ತೆಯಾಗಿದ್ದವು ಎನ್ನಲಾಗಿದೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.
ಆದೇಶ ತಕ್ಷಣದಿಂದ ಜಾರಿಗೆ ಬರಲಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ಇಂದು ಅಥವಾ ನಾಳೆ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ.








