



ವಿಟ್ಲ: ಮಾಣಿ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಗಲಾಟೆ ನಡೆದು ಅಂಪೈರ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಣಿ ನಿವಾಸಿ, ಎಕೆಎಆರ್ಎಸ್ ಆಂಬುಲೆನ್ಸ್ ಚಾಲಕರಾಗಿರುವ ರಿಜ್ವಾನ್ (22) ಅವರು ಕ್ರಿಕೆಟ್ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅ.11ರಂದು ಮಾಣಿ ಗ್ರಾಮ ಪಂಚಾಯತ್ ಮೈದಾನದಲ್ಲಿ 18 ವರ್ಷದೊಳಗಿನ ಮಕ್ಕಳಿಗಾಗಿ ಎಂಟು ತಂಡಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು.ಮಧ್ಯಾಹ್ನ 3.30ರ ಸುಮಾರಿಗೆ ಕ್ವಾಲಿಟಿ ಮಾಣಿ ಮತ್ತು ಜಿಎಫ್ಸಿ ಗಡಿಯಾರ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದಾಗ ಸ್ಕೋರ್ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಗಡಿಯಾರ ತಂಡದ ಸಮ್ಮಾಸ್ ಎಂಬವರು ನಶಾತ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದನ್ನು ರಿಜ್ವಾನ್ ಪ್ರಶ್ನಿಸಿದ್ದಾರೆ. ಆಗ ಸಮ್ಮಾಸ್ ಹಾಗೂ ಅವರ ಇಬ್ಬರು ಸ್ನೇಹಿತರು ಸೇರಿ ರಿಜ್ವಾನ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಲ್ಲೆಯಿಂದ ಗಾಯಗೊಂಡ ರಿಜ್ವಾನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








