
ಮಂಗಳೂರು: ನಗರದಲ್ಲಿ ಸರಣಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಗ್ಯಾಂಗ್ ಅನ್ನು ಮಂಗಳೂರು ದಕ್ಷಿಣ ಪೊಲೀಸರು ಪತ್ತೆಹಚ್ಚಿದ್ದು, ಮೂವರು ಬಾಲಕರು ಸೇರಿದಂತೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಕಳವು ಮಾಡಿದ 6 ಬೈಕ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ 3 ಬೈಕ್‌ಗಳು ಸೇರಿದಂತೆ ಒಟ್ಟು 9 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು ₹4.50 ಲಕ್ಷ ಎಂದು ಅಂದಾಜಿಸಲಾಗಿದೆ.ಅ.12ರಿಂದ ಅ.22ರ ಅವಧಿಯಲ್ಲಿ ವೆಲೆನ್ಸಿಯಾ ಜಂಕ್ಷನ್, ಜಪ್ಪು ಮಾರ್ಕೆಟ್, ಅತ್ತಾವರ ಕೆಎಂಸಿ ಆಸ್ಪತ್ರೆ ಬಳಿ, ಹೊಯಿಗೆ ಬಜಾರ್, ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆ ಬಳಿ ಹಾಗೂ ಕುತಾರ್ ಪಂಡಿತ್ ಹೌಸ್ ಬಳಿ ಬೈಕ್‌ಗಳು ಕಳವಾಗಿದ್ದವು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.


ಪ್ರಕರಣಗಳ ತನಿಖೆ ಕೈಗೊಂಡ ಪಿಎಸ್‌ಐ ನೇತೃತ್ವದ ವಿಶೇಷ ತಂಡ ಆರೋಪಿಗಳನ್ನು ಪತ್ತೆಹಚ್ಚಿದೆ. ಮಹಮ್ಮದ್ ಸಿಯಾಮ್ (19), ಮುಹಮ್ಮದ್ ನಾಸೀಫ್ ಅಲಿಯಾಸ್ ನಸೀಫ್ (19), ಮೊಹಮ್ಮದ್ ರಾಹೀಲ್ (18) ಹಾಗೂ ನಿಖಿಲ್ (18) ಬಂಧಿತ ಆರೋಪಿಗಳಾಗಿದ್ದಾರೆ. ಉಳಿದ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ.ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ದುಬಾರಿ ಬೈಕ್‌ಗಳನ್ನು ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಬಂಧಿತ ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರ್ ಅವರ ನೇತೃತ್ವದಲ್ಲಿ ಪಿಎಸ್‌ಐ ಮಾರುತಿ ಹಾಗೂ ಕ್ರೈಂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ ಮತ್ತು ಆಂಜನೇಯ ಕೆ.ಎಸ್. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








