

ಕೆಬೆಂಗಳೂರು : ಪರಿಸರ ಸ್ನೇಹಿ ಹಾಗೂ ಸುರಕ್ಷಿತ ದೀಪಾವಳಿ ಆಚರಣೆಗೆ ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 8 ರಿಂದ 10 ಗಂಟೆಯ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


ರವಿವಾರ ಈ ಸಂಬಂಧ ಪ್ರಕಟನೆ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವುದು ಅಥವಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಸ್ಫೋಟಕ ಕಾಯ್ದೆ ಮಾಲಿನ್ಯ ನಿಯಂತ್ರಣ ಕಾಯ್ದೆ ಸೇರಿದಂತೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಕ್ರಮವಾಗಿ ಪಟಾಕಿ ಮಾರಾಟ ಮಾಡುವುದು ಅಥವಾ ನಿಯಮಬಾಹಿರವಾಗಿ ಪಟಾಕಿ ಸಿಡಿಸುವುದು ಕಂಡುಬಂದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಖರೀದಿಸಿ ದೀಪಾವಳಿ ಆಚರಿಸಬೇಕು. ಆಸ್ಪತ್ರೆ, ಪೆಟ್ರೋಲ್ ಬಂಕ್, ಗ್ಯಾಸ್ ಕೇಂದ್ರ, ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮ ಹಾಗೂ ಮಕ್ಕಳ ಆರೈಕೆ ಕೇಂದ್ರಗಳ ಸುತ್ತಮುತ್ತ ಪಟಾಕಿ ಸಿಡಿಸಬಾರದು ಎಂದು ಅವರು ಹೇಳಿದ್ದಾರೆ.ಪಟಾಕಿ ಸಿಡಿಸುವಾಗ ಕೈಗಳಿಗೆ ಗೌಸ್ ಹಾಗೂ ಕಣ್ಣುಗಳಿಗೆ ಸುರಕ್ಷತಾ ಕನ್ನಡಕ ಧರಿಸಬೇಕು. ಅಗ್ನಿ ಅವಘಡ ತಡೆಗೆ ನೀರು, ಮರಳು ಹಾಗೂ ಅಗ್ನಿಶಾಮಕ ಉಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಯಾವುದೇ ಅವಘಡ ಸಂಭವಿಸಿದರೆ ತಕ್ಷಣ 112 ಅಥವಾ 108 ಸಹಾಯವಾಣಿಗೆ ಕರೆ ಮಾಡಬೇಕು. ಚಿಕ್ಕ ಮಕ್ಕಳು ಪೋಷಕರ ಮೇಲ್ವಿಚಾರಣೆಯಲ್ಲಿಯೇ ಪಟಾಕಿ ಸಿಡಿಸಬೇಕು. ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕಡಿಮೆ ಶಬ್ದದ ಹಸಿರು ಪಟಾಕಿಗಳನ್ನು ಬಳಸಬೇಕು ಎಂದು ಅವರು ತಿಳಿಸಿದ್ದಾರೆ.








