
ತಿರುವನಂತಪುರಂ: ಕಾಲಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ ಅಮಾನತುಗೊಂಡ 16 ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದ ತನ್ನ ಹಿಂದಿನ ಮಧ್ಯಂತರ ಆದೇಶವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ಅಮಾನತಿನ ಕಾರಣದಿಂದ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ಹಾಜರಾತಿ ಕೊರತೆ ಎದುರಾಗಿದೆ. ಆದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ನವೆಂಬರ್ 4ರಿಂದ ಆರಂಭವಾಗುವ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ವಿಶ್ವವಿದ್ಯಾಲಯದ ಉಪಕುಲಪತಿ ಸಿಝಾ ಥಾಮಸ್ ನೇತೃತ್ವದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಮಂಗಳವಾರ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿಲ್ ಕೆ. ನರೇಂದ್ರನ್ ಮತ್ತು ಮುರಳೀ ಕೃಷ್ಣ ಎಸ್. ಅವರನ್ನೊಳಗೊಂಡ ವಿಭಾಗೀಯ ಪೀಠ, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಗತ್ಯವಾದ ಅರ್ಹತೆ ಹೊಂದಿರುವುದನ್ನು ಸಾಬೀತುಪಡಿಸಿಲ್ಲ ಎಂದು ಅಭಿಪ್ರಾಯಪಟ್ಟಿತು.
ಹಾಜರಾತಿ ಕೊರತೆಯನ್ನು ಮನ್ನಾ ಮಾಡುವಂತೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ನಿಯಮಾನುಸಾರ ಅರ್ಜಿ ಸಲ್ಲಿಸಬೇಕಿತ್ತು. ಅದರೊಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ, ಸಂಬಂಧಿತ ವಿಭಾಗದ ಮುಖ್ಯಸ್ಥರು ಅಥವಾ ಕೇಂದ್ರದ ನಿರ್ದೇಶಕರ ಶಿಫಾರಸು ಪಡೆಯಬೇಕಿತ್ತು. ಆದರೆ ವಿದ್ಯಾರ್ಥಿಗಳು ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲ ಎಂದು ನ್ಯಾಯಪೀಠ ತಿಳಿಸಿತು.
ಇದಲ್ಲದೆ, ಪರೀಕ್ಷಾ ಅಧಿಸೂಚನೆಯ ಪ್ರಕಾರ ನಿಗದಿತ ಅವಧಿಯೊಳಗೆ ಹಾಜರಾತಿ ಪ್ರಮಾಣಪತ್ರ, ಪ್ರಗತಿ ವರದಿ ಹಾಗೂ ಪರೀಕ್ಷಾ ಶುಲ್ಕ ಪಾವತಿಸಿದ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿತ್ತು. ಈ ಅಗತ್ಯ ದಾಖಲೆಗಳನ್ನೂ ವಿದ್ಯಾರ್ಥಿಗಳು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಹೈಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿರುವ ಎಸ್‌ಎಫ್‌ಐ ಘಟಕದ ಅಧ್ಯಕ್ಷೆ ಅರ್ಚನಾ, ನ್ಯಾಯಾಲಯದಿಂದ ಇಂತಹ ತೀರ್ಪನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ನಮ್ಮ ವಿರುದ್ಧದ ಅನ್ಯಾಯ ಮುಂದುವರಿದಿದ್ದು, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ನ್ಯಾಯಕ್ಕಾಗಿ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ








