


ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ ತಮಿಳುನಾಡಿನ ಮಧುರೈಗೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ 6ಇ6526 ವಿಮಾನದಲ್ಲಿ ಈ ಘಟನೆ ನಡೆದಿದೆ. 92 ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ವಿಮಾನ ಟೇಕಾಫ್‌ಗಾಗಿ ರನ್‌ವೇನಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಹೈಡ್ರಾಲಿಕ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಎಚ್ಚೆತ್ತುಕೊಂಡ ಪೈಲಟ್ ತುರ್ತು ಬ್ರೇಕ್ ಹಾಕಿ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದ್ದಾರೆ.
ಬಳಿಕ ವಿಮಾನವನ್ನು ಸುರಕ್ಷಿತವಾಗಿ ರನ್‌ವೇಯಿಂದ ವಾಪಸ್ ಕರೆತಂದು, ವಿಮಾನದಲ್ಲಿದ್ದ ಎಲ್ಲಾ 92 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಪ್ರಯಾಣಿಕರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಿದ್ದು, ಬಳಿಕ ಮತ್ತೊಂದು ವಿಮಾನದ ಮೂಲಕ ಮಧುರೈಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ತಾಂತ್ರಿಕ ದೋಷ ಕಾಣಿಸಿಕೊಂಡ ವಿಮಾನವನ್ನು ರಿಪೇರಿಗೆ ಸ್ಥಳಾಂತರಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ. ಟೇಕಾಫ್‌ಗೆ ಕೆಲವೇ ಕ್ಷಣಗಳಿರುವಾಗ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಪೈಲಟ್ ತಕ್ಷಣ ಕೈಗೊಂಡ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದಂತಾಗಿದೆ.








