
ಪುತ್ತೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿರೋಧಿಸಿ ನ.9ರಂದು ಪುತ್ತೂರಿನಲ್ಲಿ ಇಂಡಿಯಾ ಒಕ್ಕೂಟದ ವತಿಯಿಂದ ನಡೆದ ತಿರಂಗಾ ಜಾಥಾ ಹಾಗೂ ಪ್ರತಿಭಟನಾ ಸಭೆಗೆ ಶಾಸಕ ಅಶೋಕ್ ರೈ ಗೈರಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ರಾಜ್ಯಾದ್ಯಂತ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ನಡೆದ ಪ್ರತಿಭಟನೆಯ ಭಾಗವಾಗಿ ಪುತ್ತೂರಿನಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಥಳೀಯ ಶಾಸಕರಾಗಿರುವ ಅಶೋಕ್ ರೈ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ನೇತೃತ್ವ ವಹಿಸಲಿದ್ದಾರೆ ಎಂದು ಕಾರ್ಯಕರ್ತರು ನಿರೀಕ್ಷಿಸಿದ್ದರು. ಆದರೆ ಅವರು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳವು ಶಾಸಕರ ಕಚೇರಿಯ ಸಮೀಪದಲ್ಲೇ ಇದ್ದು, ಆ ಸಂದರ್ಭದಲ್ಲಿ ಅವರು ಕಚೇರಿಯಲ್ಲಿದ್ದರು ಎನ್ನಲಾಗಿದೆ. ಆದರೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸುವ ಬದಲು ಖಾಸಗಿ ಡಿಜಿಟಲ್ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂಬ ಆರೋಪವೂ ಕೇಳಿಬಂದಿದೆ.
ಪ್ರತಿಭಟನೆಗೆ ಮಂಗಳೂರಿನಿಂದಲೂ ಹಲವು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಶಾಸಕ ಅಶೋಕ್ ರೈ ಅವರ ಗೈರುಹಾಜರಿ ಪಕ್ಷದೊಳಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು, ಶಾಸಕರು ತಮ್ಮ ಗೈರುಹಾಜರಿಗೆ ಕಾರಣ ಸ್ಪಷ್ಟಪಡಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಕೆಪಿಸಿಸಿ ವಕ್ತಾರರಾದ ಎಂ.ಜಿ. ಹೆಗ್ಡೆ, ಕಾವು ಹೇಮನಾಥ ಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿತ್ತು.
ಗಮನಾರ್ಹ ಸಂಗತಿಯೆಂದರೆ, ಪ್ರತಿಭಟನೆಗೆ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಲಹೆಗಳನ್ನು ನೀಡಿದ್ದರು ಎನ್ನಲಾಗಿದೆ. ಆದರೆ ಅಂತಿಮವಾಗಿ ಪ್ರತಿಭಟನಾ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.








