


ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ವೈದ್ಯಕೀಯ ಪ್ರೊಸೀಜರ್ಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರೋಗ್ಯ ಇಲಾಖೆ ಖಡಕ್ ಸೂಚನೆ ನೀಡಿದೆ. ಈ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ದರಪಟ್ಟಿ ಪ್ರದರ್ಶಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮುನ್ನವೇ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಚಿಕಿತ್ಸಾ ವೆಚ್ಚದ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಲಭ್ಯವಿರುವ ಪ್ರಮುಖ ಚಿಕಿತ್ಸೆಗಳು ಹಾಗೂ ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಸಾರ್ವಜನಿಕರಿಗೆ ಸುಲಭವಾಗಿ ಕಾಣುವ ಸ್ಥಳದಲ್ಲಿ ಪ್ರದರ್ಶಿಸುವುದು ಕಡ್ಡಾಯವಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಸಾವಿರಾರು ಬಗೆಯ ಚಿಕಿತ್ಸೆಗಳು ಮತ್ತು ವೈದ್ಯಕೀಯ ಪ್ರೊಸೀಜರ್ಗಳು ಲಭ್ಯವಿರುವುದರಿಂದ ಎಲ್ಲದರ ದರಪಟ್ಟಿಯನ್ನು ಪ್ರದರ್ಶಿಸುವುದು ಕಷ್ಟ ಎಂದು ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಆರೋಗ್ಯ ಇಲಾಖೆಯೊಂದಿಗಿನ ಸಭೆಯಲ್ಲಿ ತಿಳಿಸಿತ್ತು. ಇದನ್ನು ಪರಿಗಣಿಸಿರುವ ಇಲಾಖೆ ಪರ್ಯಾಯ ವ್ಯವಸ್ಥೆ ರೂಪಿಸಿದೆ. ಅದರಂತೆ ಪ್ರಮುಖ ಚಿಕಿತ್ಸೆಗಳು ಮತ್ತು ವೈದ್ಯಕೀಯ ಪ್ರಕ್ರಿಯೆಗಳ ದರಪಟ್ಟಿಯನ್ನು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಉಳಿದ ಚಿಕಿತ್ಸೆಗಳ ದರಗಳನ್ನು ಒಳಗೊಂಡ ಪ್ರತ್ಯೇಕ ಬುಕ್ಲೆಟ್ ಸಿದ್ಧಪಡಿಸಬೇಕು. ರೋಗಿಗಳು ಅಥವಾ ಅವರ ಸಂಬಂಧಿಕರು ಕೇಳಿದಾಗ ಈ ಬುಕ್ಲೆಟ್ ನೀಡಬೇಕು ಎಂದು ಸೂಚಿಸಲಾಗಿದ್ದು, ಆರೋಗ್ಯ ಇಲಾಖೆಯ ಈ ಪ್ರಸ್ತಾವನೆಗೆ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಕೂಡ ಒಪ್ಪಿಗೆ ಸೂಚಿಸಿದೆ.
ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳು ಇನ್ನೂ ದರಪಟ್ಟಿಯನ್ನು ಪ್ರದರ್ಶಿಸಿಲ್ಲ ಎಂಬುದು ಆರೋಗ್ಯ ಇಲಾಖೆಯ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ನಿಯಮ ಅನುಷ್ಠಾನದಲ್ಲಿ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಅವುಗಳನ್ನು ಸರ್ಕಾರದ ಗಮನಕ್ಕೆ ತರುವಂತೆಯೂ ನಿರ್ದೇಶಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.








