
ಸುಳ್ಯ: ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸಕ್ಕಾಗಿ ಮಾರಾಟ ಮಾಡಲು ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ನ.18ರಂದು ಬೆಳಗ್ಗಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು.


ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಮೈದಾನದಲ್ಲಿದ್ದ ಕಂಬಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದ ಇಬ್ಬರನ್ನು ಪತ್ತೆಹಚ್ಚಿದ್ದಾರೆ. ವಿಚಾರಣೆ ನಡೆಸಿದಾಗ ಅವರು ಸುಳ್ಯದ ಆಲೆಟ್ಟಿ ನಿವಾಸಿಗಳಾದ ಹಾಶಿರ್.ಎ (28) ಹಾಗೂ ಸಂಶುದ್ದೀನ್.ಎಸ್.ಎಂ. (25) ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಕೃತ್ಯಕ್ಕೆ ಬಳಸಲು ಬಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಜೊತೆಗೆ 15ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








