ಮಂಗಳೂರು: ಕಣಚೂರು ಕಾಲೇಜು ಆವರಣದಿಂದ ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಕೇರಳದಲ್ಲಿರುವ ಆಕೆಯ ಸಂಬಂಧಿಕರ ಮನೆಯಿಂದ ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.ರಕ್ಷಿಸಲಾದ ವಿದ್ಯಾರ್ಥಿನಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದು, ತಾನು ಹೆತ್ತವರೊಂದಿಗೆ ತೆರಳಲು ಇಚ್ಛಿಸುವುದಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾಳೆ.


ಸದ್ಯ ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬಳಿಕ ಆಕೆಯ ಇಚ್ಛೆಯಂತೆ ಸೂಕ್ತ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ಭದ್ರತೆಯಲ್ಲಿ ಕಳುಹಿಸಿಕೊಡಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಠಾಣೆಗೆ ಕರೆತರಲಾದ ಇಬ್ಬರು ಆರೋಪಿಗಳ ವಿರುದ್ಧದ ಅಪರಾಧಕ್ಕೆ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ವಿಧಿಸಲು ಅವಕಾಶವಿರುವ ಹಿನ್ನೆಲೆಯಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಅಡಿಯಲ್ಲಿ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.








