
ವಿಟ್ಲ: ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಇದೀಗ ಎಚ್ಚೆತ್ತುಕೊಂಡು ರಾಜ್ಯ ಸರ್ಕಾರ ಹಾಗೂ ಪುತ್ತೂರು ಶಾಸಕರ ವಿರುದ್ಧ ಟೀಕೆ ಮಾಡಲು ಮುಂದಾಗಿರುವುದು ಹಾಸ್ಯಾಸ್ಪದ ಎಂದು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ವಾಗ್ದಾಳಿ ನಡೆಸಿದ್ದಾರೆ.



ನ.23ರಂದು ವಿಟ್ಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿ ನಡೆಸಿದ ಪ್ರತಿಭಟನೆ ಹಾಗೂ ಆ ಸಂದರ್ಭದಲ್ಲಿ ಮುಖಂಡರು ನೀಡಿದ ಹೇಳಿಕೆಗಳಿಗೆ ತಿರುಗೇಟು ನೀಡಿದರು.
15ನೇ ಹಣಕಾಸು ಯೋಜನೆಯಲ್ಲಿ ಯಾವುದೇ ಅನುದಾನ ಬಂದಿಲ್ಲ. 16ನೇ ಹಣಕಾಸು ಯೋಜನೆಯ ಅನುದಾನವೂ ಬಿಡುಗಡೆಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಿಟ್ಲಕ್ಕೆ ಬಂದು ಅನುದಾನದ ಬಗ್ಗೆ ಮಾತನಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ತಮ್ಮದೇ ಕ್ಷೇತ್ರದ ಬೆಳ್ತಂಗಡಿ-ಉಪ್ಪಿನಂಗಡಿ ರಸ್ತೆಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದ ಅವರಿಗೆ ಪುತ್ತೂರು ಶಾಸಕರ ಬಗ್ಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜನರಿಗೆ ತಲುಪುತ್ತಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿಟ್ಲದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ನಲ್ಲಿ ಬಿಜೆಪಿ ಆಡಳಿತವಿದ್ದರೂ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಬಿಜೆಪಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸಿರಲಿಲ್ಲ. ಇದು ಬಡವರ ಬಗ್ಗೆ ಬಿಜೆಪಿಗಿರುವ ತಾತ್ಸಾರವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಪುತ್ತೂರು ಶಾಸಕರ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪ್ರಿಯತೆಗೆ ಅವರ ‘ಜನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸಾಗರವೇ ಸಾಕ್ಷಿಯಾಗಿದೆ ಎಂದರು.
ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತನಾಡಿ, ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಟ್ಲದಲ್ಲಿ ಪುತ್ತೂರು ಶಾಸಕರ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಫಲಕದಲ್ಲಿ ತಮ್ಮ ಹೆಸರನ್ನೂ ಹಾಕಿಸಿಕೊಂಡು ಅಭಿನಂದನೆ ಸ್ವೀಕರಿಸಿರುವುದನ್ನು ಮರೆತಂತಿದೆ ಎಂದು ವ್ಯಂಗ್ಯವಾಡಿದರು.
ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಸಾಧನೆ ಮಾಡದ ಬಿಜೆಪಿಯವರು ಮುಂದಿನ ಚುನಾವಣೆಗಳಲ್ಲಿ ಮತ ಕೇಳಲು ಬಂದಾಗ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಎಂ. ಹಂಝ ಹಾಗೂ ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ ಉಪಸ್ಥಿತರಿದ್ದರು.








