Thursday, November 26, 2026
spot_imgspot_img
spot_imgspot_img

ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶಿಗರ ಗಡಿಪಾರು

- Advertisement -
- Advertisement -

ಉಡುಪಿ: ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶದ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಂಡಿದ್ದು, ಇದೀಗ ಅವರನ್ನು ಭಾರತದಿಂದ ಗಡಿಪಾರು ಮಾಡುವ ಪ್ರಕ್ರಿಯೆಗೆ ಪೊಲೀಸ್ ಇಲಾಖೆ ಮುಂದಾಗಿದೆ.

2024ರ ಅಕ್ಟೋಬರ್ 11ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿತ್ತು.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಡಿಸೆಂಬರ್ 8ರಂದು ಹತ್ತು ಮಂದಿ ಆರೋಪಿಗಳಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿತ್ತು.

ಅದರಂತೆ ಆರೋಪಿಗಳು ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಪ್ರಾಥಮಿಕವಾಗಿ ಬಂಧನದಲ್ಲಿದ್ದು, ಬಳಿಕ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸಿದ್ದರು. ಅವರ ಶಿಕ್ಷೆಯ ಅವಧಿ 2026ರ ಅಕ್ಟೋಬರ್ 10ರಂದು ಪೂರ್ಣಗೊಂಡಿದೆ. ಬಾಂಗ್ಲಾದೇಶದ ಪ್ರಜೆಗಳನ್ನು ಅವರ ತಾಯ್ನಾಡಿಗೆ ಗಡಿಪಾರು ಮಾಡುವ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹಾಗೂ ಬೆಂಗಳೂರಿನ ಶಾಂತಿನಗರದಲ್ಲಿರುವ ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ 10 ಮಂದಿಯನ್ನು ಗಡಿಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಮಾಂಡೆಂಟ್ ಹಾಗೂ ನೋಡಲ್ ಅಧಿಕಾರಿಯ ಮುಂದೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯ್ಕ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಬೆಂಗಾವಲಿನಲ್ಲಿ ಉಡುಪಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ತೆರಳಿ, ಅಲ್ಲಿಂದ ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಕರೆದೊಯ್ಯುವ ಪ್ರಕ್ರಿಯೆ ಆರಂಭಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ಜಿಲ್ಲಾ ವಿದೇಶಿಯರ ನೋಂದಣಾಧಿಕಾರಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಗಡಿಪಾರು ಪ್ರಕ್ರಿಯೆ ನಡೆಯುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!