ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಆರಂಭಿಸಲಾಗುತ್ತಿದ್ದು, ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಚಾಲನೆ ನೀಡಿ ಮಾಹಿತಿಪತ್ರ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದ ಎಲ್ಲ ಪ್ರೇಕ್ಷಣೀಯ ಸ್ಥಳಗಳಿಗೆ ಕಾಯಕಲ್ಪ ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುವುದು. ಕೆರೆಕಟ್ಟೆ ತುಂಬಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದ ತಾನು, ಸಣ್ಣ ನೀರಾವರಿ ಇಲಾಖೆಯ ಸಚಿವನಾಗುವ ನಿರೀಕ್ಷೆಯಲ್ಲಿದ್ದೆ. ಆದರೆ, ಆಕಸ್ಮಿಕವಾಗಿ ಪ್ರವಾಸೋದ್ಯಮ ಇಲಾಖೆ ದೊರಕಿದ್ದು, ಅಭಿವೃದ್ಧಿ ದೃಷ್ಟಿಯಿಂದ ಬಹಳಷ್ಟು ಆಲೋಚನೆ ಮಾಡಿದ್ದು, ಈಗಾಗಲೇ ಮೈಸೂರು ಹಾಗೂ ಮಂಗಳೂರಿಗೆ ತಲಾ ಎರಡು ಬಾರಿ ಭೇಟಿ ನೀಡಿರುವುದಾಗಿ ತಿಳಿಸಿದರು.

ಈ ಸಂದರ್ಭ ಸಚಿವ ಯೋಗೀಶ್ವರ್ ಹಾಗೂ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಅವರು ವೈಯಕ್ತಿಕ ನೆಲೆಯಲ್ಲಿ ತಲಾ 5 ಲಕ್ಷ ರೂ. ದೇಣಿಗೆ ಘೋಷಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಪತ್ರಕರ್ತರ ಬೇಡಿಕೆಗಳಿಗೆ ಸರಕಾರದ ಸೂಚನೆ ನಿಯಮಗಳ ಮೇರೆಗೆ ಪಾಲಿಕೆ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.










