ಮಂಗಳೂರು: ಕೋಣಾಜೆ ಗ್ರಾಮ ಪಂಚಾಯಿತಿ ಸಂಪೂರ್ಣ ಸ್ತಬ್ದಗೊಂಡಿದ್ದು, ನೀರುಮಾರ್ಗ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಮಂಗಳೂರು ತಹಶೀಲ್ದಾರ್ ಟಿ. ಗುರುಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಟಾಸ್ಕ್‌ಪೋರ್ಸ್ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು. ಇನ್ನು ಒಂದು ವಾರಗಳ ಕಾಲ ಈ ಎರಡು ಗ್ರಾಮಗಳನ್ನು ಸಂಪೂರ್ಣ ಲಾಕ್‌ಡೌನ್‌ಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ನೀರುಮಾರ್ಗ-ಬೊಂಡಂತಿಲ ಗ್ರಾಮದಲ್ಲಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಎಲ್ಲ ಅಂಗಡಿ ಮಾಲೀಕರು, ಸಿಬ್ಬಂದಿ ಹಾಗೂ ಅಪಾರ್ಟ್‌ಮೆಂಟ್ ನಿವಾಸಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್ ಪರೀಕ್ಷೆ ಮಾಡಿಸದಿದ್ದಲ್ಲಿ ಆ ಅಂಗಡಿದಾರರ ಲೈಸೆನ್ಸ್ ರದ್ದು ಮಾಡಲು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನೀರುಮಾರ್ಗ-ಬೊಂಡಂತಿಲ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು ಎಂದು ನೀರುಮಾರ್ಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ನೀರುಮಾರ್ಗದ ಪಾಲ್ದಾನೆ ಮತ್ತು ನೀರುಮಾರ್ಗ ಸುಬ್ರಹ್ಮಣ್ಯ ರಸ್ತೆಯಲ್ಲಿ ನಾಕಾಬಂಧಿ ಹಾಕಿ ನಿರ್ಬಂಧ ವಿಧಿಸಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೈಕ್ ಪ್ರಚಾರ, ಒಂದು ವಾರದ ಮಟ್ಟಿಗೆ ಪಡಿತರ ಅಂಗಡಿ ಕೂಡಾ ಬಂದ್, ಅಂಗಡಿಗಳ ಮಾಲೀಕರ ಸಭೆ ಕರೆದು ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆಮನೆಗೆ ಪೂರೈಕೆಗೆ ಸೂಚನೆ ನೀಡಲಾಗಿದೆ.











