

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಹುಬ್ಬಳ್ಳಿಯ ಮುಕ್ತಿಧಾಮದ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.

ಜಿ.ಕೆ.ಗೋವಿಂದರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನಗಳಿಸಿದ್ದರು. ಒಬ್ಬ ಅನನ್ಯ ಚಿಂತಕರನ್ನು ನಾಡು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಆ ದೇವರು ಶಾಂತಿ ನೀಡಲಿ ಎಂದು ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರೊ.ಜಿಕೆಜಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದಿದ್ದಾರೆ.











