

ನವದೆಹಲಿ: ಐತಿಹಾಸಿಕ ಬಾಂಗ್ಲಾ ಸಾಹಿಬ್ ಗುರುದ್ವಾರದ ಆವರಣದಲ್ಲಿ ಪ್ರತಿಭಟನೆ ನಡೆಸಿ ಗದ್ದಲ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹಾಗೂ ಪಕ್ಷದ ಇತರ ಪ್ರಮುಖ ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಅ. 10 ರಂದು ಆಪ್ ಕಾರ್ಯಕರ್ತರು ಮತ್ತು ಬೆಂಬಲಿಗರು ಗುರುದ್ವಾರ ಆವರಣವನ್ನು ಪ್ರವೇಶಿಸಿ ಪ್ರತಿಭಟನೆ ನಡೆಸುವ ಮೂಲಕ ಶಾಂತಿ ಭಂಗ ಉಂಟುಮಾಡಿದ್ದಾರೆ. ಧಾರ್ಮಿಕ ಪಾವಿತ್ರ‍್ಯತೆ ಹೊಂದಿರುವ ‘ಗುರು ಘರ್’ ಅನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅ. 11 ರಂದು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಿದೆ.
ಮಾಜಿ ಸಿಎಂ ಕೇಜ್ರಿವಾಲ್ ಮಾತ್ರವಲ್ಲದೆ ಹಲವು ಆಪ್ ಶಾಸಕರು ಹಾಗೂ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ತಿರುಚಿದ ವಿಡಿಯೋಗಳನ್ನು ಹಂಚಿಕೊಂಡು ಗುರುದ್ವಾರ ಸಮಿತಿಯ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಮಿತಿ ದೂರಿನಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.








