ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿದ್ದಾರೆ. ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಮುನಿರತ್ನ ಅವರನ್ನು ಶನಿವಾರ ಪೊಲೀಸರು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದಿದ್ದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾದೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಗುತ್ತಿಗೆದಾರ ಚಲುವರಾಜು ಎಂಬುವವರು ಶಾಸಕ ಮುನಿರತ್ನ ತನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಲ್ಲದೆ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ.