Wednesday, November 25, 2026
spot_imgspot_img
spot_imgspot_img

ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: ಇಡಿ, ಸಿಬಿಐ ತನಿಖೆಗೆ ನೀಡಿದ್ದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ನವದೆಹಲಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣವನ್ನು ಮರುಪರಿಶೀಲನೆಗಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮರಳಿಸಿರುವ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸುವಂತೆ ಸೂಚಿಸಿದೆ.

ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಗ್ನೇಶ್ ಶಿಶಿರ್ ಸಲ್ಲಿಸಿದ್ದ ಅರ್ಜಿಯಲ್ಲಿ, ರಾಹುಲ್ ಗಾಂಧಿ ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಆರೋಪಗಳ ಕುರಿತು ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ.ಗೆ ನಿರ್ದೇಶನ ನೀಡಬೇಕೆಂದು ಅವರು ಕೋರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಆರೋಪಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸುವಂತೆ ಸಿಬಿಐ ಮತ್ತು ಇಡಿಗೆ ಸೂಚಿಸಿತ್ತು. ಅಲ್ಲದೆ, ತನಿಖೆಯ ಪ್ರಗತಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ನಿರ್ದೇಶಿಸಿತ್ತು. ಬಳಿಕ ಸಿಬಿಐ ಸಲ್ಲಿಸಿದ್ದ ಅಫಿಡವಿಟ್‌ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ತನಿಖೆಯ ಪ್ರಗತಿ ಕುರಿತು ಹೊಸ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು.

ಹೈಕೋರ್ಟ್‌ನ ಈ ಆದೇಶಗಳನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆಗಸ್ಟ್ 17ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ, ಅಲಹಾಬಾದ್ ಹೈಕೋರ್ಟ್‌ನ ವಿಚಾರಣೆಗೆ ತಡೆ ನೀಡಿತ್ತು. ಅಲ್ಲದೆ, ಹೈಕೋರ್ಟ್‌ನ ಹಿಂದಿನ ನಿರ್ದೇಶನದಂತೆ ಯಾವುದೇ ವರದಿ ಸಲ್ಲಿಸದಂತೆ ಸಿಬಿಐ ಮತ್ತು ಇಡಿಗೆ ಸೂಚಿಸಿತ್ತು.

ಇದೀಗ ಹೈಕೋರ್ಟ್‌ನ ಹಿಂದಿನ ನಿರ್ದೇಶನಗಳನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ. ಅರ್ಜಿಯ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರನ್ನೂ ಪಕ್ಷಕಾರರನ್ನಾಗಿ ಸೇರಿಸಿಕೊಂಡು, ಅವರ ವಾದ ಆಲಿಸಿದ ಬಳಿಕವೇ ಮುಂದಿನ ಆದೇಶ ನೀಡಬೇಕು ಎಂದು ನಿರ್ದೇಶಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!