ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಆರೋಪಿಸಿ ಪ್ರತಿಭಟನೆ ನಡೆಸಿದ್ದು,ಸ್ಥಳಕ್ಕೆ ಪೊಲೀಸರು ಹಾಗೂ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಇದನ್ನು ವಿಸಿಕ್ಸ್ ಎನ್ನುವ ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರೋದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೇ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ ಅವರು ಹೇಳಿದ್ದಾರೆ.
ಇದೆ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಇವರನ್ನು ಬಂಧಿಸಲಾಗಿದ್ದು, ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ತೀವ್ರ ಅಸ್ವಸ್ಥ ಗೊಂಡ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ