





ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುತ್ತಿದೆ. ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಜಾರಿಗೆ ತರಲು ಹೊರಟ್ಟಿದ್ದು, ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಕೇರಳ ಸರ್ಕಾರದ ನಡೆಯನ್ನ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ವಿರೋಧಿಸಿದ್ದು, ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ‍್ಯದ ಮೇಲಿನ ಪ್ರಹಾರ ಎಂದು ಟ್ವೀಟ್ ಮೂಲಕ ವಿಷಾದಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಅಂತಾ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಉಳಿಸುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ‍್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಮಾಡಬಾರದು.








